ಮಹಿಳಾ ಮೀಸಲಾತಿ ಬಗ್ಗೆ ಚರ್ಚೆ; ದಕ್ಷಿಣ ಭಾರತಕ್ಕೆ ಅನ್ಯಾಯವಾಗದಂತೆ ಸಿದ್ದರಾಮಯ್ಯ ಎಚ್ಚರಿಕೆ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿವಿಯಲ್ಲಿ ಗುಟ್ಟಾಗಿ ಮಾತನಾಡಿದ್ದ ಫೋಟೋ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಈ 'ರಹಸ್ಯ' ಸಂಭಾಷಣೆಯ ಕುರಿತ ಕುತೂಹಲಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಇಂದು ತೆರೆ ಎಳೆದಿದ್ದಾರೆ.
ಶನಿವಾರ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಗಳ ಜೊತೆಗಿನ ಆ ಕ್ಷಣದ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಿದರು.
ನಮ್ಮ ನಡುವೆ ಯಾವುದೇ 'ಗುಪ್ತ' ಆಲೋಚನೆಯಿಲ್ಲ
"ನನ್ನ ಮತ್ತು ಪ್ರಧಾನಿ ಮೋದಿ ಅವರ ನಡುವೆ ಯಾವುದೇ ರಹಸ್ಯ ರಾಜಕೀಯ ಚರ್ಚೆ ನಡೆದಿಲ್ಲ. ಮಹಿಳಾ ಮೀಸಲಾತಿ ಜಾರಿ ಕುರಿತು ನನ್ನ ವೈಯಕ್ತಿಕ ಅಭಿಪ್ರಾಯವನ್ನು ಅವರು ಕೇಳಿದರು. ನಾನು ಮಹಿಳಾ ಮೀಸಲಾತಿಯ ಪರವಾಗಿದ್ದೇನೆ ಎಂದು ಅವರಿಗೆ ಸ್ಪಷ್ಟವಾಗಿ ಮತ್ತು ಸಕಾರಾತ್ಮಕವಾಗಿ ಉತ್ತರಿಸಿದ್ದೇನೆ ಅಷ್ಟೆ," ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೇಂದ್ರದ ದ್ವಂದ್ವ ನೀತಿಗೆ ಸಿಎಂ ಕಿಡಿ
ಮಹಿಳಾ ಮೀಸಲಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಸಿಎಂ, ಪ್ರಧಾನಿಯವರಿಗೆ ನಿಜವಾಗಿಯೂ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆಯಿದ್ದರೆ 2023ರಲ್ಲೇ ಮೀಸಲಾತಿಯನ್ನು ಜಾರಿಗೆ ತರಬೇಕಿತ್ತು ಎಂದು ಟೀಕಿಸಿದರು.
"ಮೀಸಲಾತಿ ಜಾರಿಗೆ ನಮ್ಮ ಅಭ್ಯಂತರವಿಲ್ಲ. ಆದರೆ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ಜನಸಂಖ್ಯಾ ನಿಯಂತ್ರಣ ಮಾಡಿರುವ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಾರದು. ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರಗಳ ಸಮಾನ ಹಂಚಿಕೆಯಾಗಬೇಕು ಎಂಬುದು ನಮ್ಮ ಕಟ್ಟುನಿಟ್ಟಿನ ಒತ್ತಾಯವಾಗಿದೆ," ಎಂದು ಅವರು ಪ್ರತಿಪಾದಿಸಿದರು.
ಗ್ಯಾರಂಟಿ ಕಾಪಿ ಮಾಡುತ್ತಿದೆ ಬಿಜೆಪಿ!
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ನೀಡಿದ್ದ ಹಿಂದಿನ ಹೇಳಿಕೆಗಳನ್ನು ಸಿದ್ದರಾಮಯ್ಯ ನೆನಪಿಸಿದರು. "ಈ ಹಿಂದೆ ಇದೇ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳು ಟೀಕಿಸಿದ್ದರು. ಆದರೆ ಈಗ ಬಿಜೆಪಿಯವರೇ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ. ಇವರ ದ್ವಂದ್ವ ನೀತಿ ಈಗ ಜನರಿಗೆ ಬಯಲಾಗಿದೆ," ಎಂದು ಕಿಡಿಕಾರಿದರು.
ಫಲಿತಾಂಶದ ಭವಿಷ್ಯ:
ತಮಿಳುನಾಡು ಮತ್ತು ಕೇರಳ ಚುನಾವಣಾ ಫಲಿತಾಂಶದ ಕುರಿತು ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಮಿಳುನಾಡಿನಲ್ಲಿ ಡಿಎಂಕೆ ಹಾಗೂ ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.









Comments
Leave a Comment